ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ.
ನ್ಯಾ. ಕೆ. ಸೋಮಶೇಖರ್ ಮತ್ತು ನ್ಯಾ.ರಾಜೇಶ್ ಕೆ.ರೈ ಅವರಿದ್ದ ವಿಭಾಗೀಯ ಪೀಠ ಸರಕಾರ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಕಳೆದ ಸೋಮವಾರ ವಾದ-ಪ್ರತಿವಾದ ಆಲಿಸುವು ದನ್ನು ಪೂರ್ಣಗೊಳಿಸಿದ ಬಳಿಕ ತೀರ್ಪು ಕಾಯ್ದಿರಿಸಿತು.
ಕರ್ನಾಟಕ ಶಿಕ್ಷಣ ಕಾಯಿದೆಯಡಿ ರಾಜ್ಯ ಶಿಕ್ಷಣ ಇಲಾಖೆ 2023ರ ಅ.6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆನಡೆಸುವುದಕ್ಕೆ ತೀರ್ಮಾನಿಸಿತ್ತು.
ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ ಸಂಘಗಳು, “ಸರಕಾರದ ಈ ಸುತ್ತೋಲೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 30 ಮತ್ತು – ಕರ್ನಾಟಕ ಶಿಕ್ಷಣ ಕಾಯಿದೆಯ ವಿವಿಧ ಸೆಕ್ಷನ್ ಗಳ ಉಲ್ಲಂಘನೆ ಯಾಗಿದ್ದು, ಬೋರ್ಡ್ ಪರೀಕ್ಷೆ ರದ್ದುಪಡಿಸಬೇಕು,” ಎಂದು ಕೋರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆಯ ಸುತ್ತೋಲೆಗಳನ್ನು ರದ್ದುಪಡಿಸಿತ್ತು.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಅದನ್ನು ಅರ್ಜಿದಾರರು ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಆದೇಶಕ್ಕೆ ತಡೆ ನೀಡಿದ್ದ ಸುಪ್ರೀಂಕೋರ್ಟ್, ಸರಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಸಮಗ್ರ ವಿಚಾರಣೆ ನಡೆಸಿ ಆದಷ್ಟು ಶೀಘ್ರ ತೀರ್ಪು ನೀಡುವಂತೆ ಸೂಚಿಸಿತ್ತು.