ಅಕ್ರಮ ಗಣಿಗಾರಿಕೆ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ; ಸಿಬಿಐ ವಿಶೇಷ ಕೋರ್ಟ್ ತೀರ್ಪು
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ - ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಹೈದರಾಬಾದ್: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ - ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬರೋಬ್ಬರಿ 13 ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ 3,400ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು 219 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.