ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರು, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರ ತಂದೆ ಹಾಗೂ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಬೀದರ್‌ನಲ್ಲಿ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು.
ವಯೋಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಭೀಮಣ್ಣ ಖಂಡ್ರೆಯವರನ್ನು ಕೆಲವು ದಿನಗಳ ಹಿಂದೆ ಬೀದರ್‌ನ ಮಲ್ಸಿ ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅವರನ್ನು ಮನೆಗೆ ಕರೆತಂದು ಕುಟುಂಬದ ಸದಸ್ಯರು ಆರೈಕೆ ಮಾಡುತ್ತಿದ್ದರು. ಈ ವೇಳೆ ಶುಕ್ರವಾರ ರಾತ್ರಿ ಅವರು ಕೊನೆಯುಸಿರೆಳೆದರು.
ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಅವರ ಪುತ್ರ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಸ್ವಗೃಹದ ಆವರಣದಲ್ಲಿ ಇಂದು ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
