ಕಂಪ್ಲಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಮಟ್ಟವನ್ನು ಎತ್ತಿಹಿಡಿದಿದ್ದಾರೆ. ಸೌಲಭ್ಯಗಳ ಕೊರತೆ ನಡುವೆಯೂ ಶಿಕ್ಷಕರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂಬುದು ವಿಶೇಷ.
ರಾಮಸಾಗರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ. ಜ್ಯೋತಿ 625ರಲ್ಲಿ 598 ಅಂಕಗಳನ್ನು ಪಡೆದು ತಾಲೂಕಿಗೆ ಟಾಪರ್ ಆಗಿ ಹೊರಹೊಮ್ಮಿರುವುದು ಸರ್ಕಾರಿ ಶಾಲೆಗಳ ಸಾಮರ್ಥ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.
ಈ ಸಾಧನೆಗೆ ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
