ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ BJP ನಾಯಕ ರಾಘವೇಂದ್ರ ತಳವಾರ ಎಚ್ಚರಿಕೆ


ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ನಾಯಕ ರಾಘವೇಂದ್ರ ತಳವಾರ ಎಚ್ಚರಿಕೆ

ಬೆಂಗಳೂರು: ಬಿಜೆಪಿ ನಾಯಕ ರಾಘವೇಂದ್ರ ತಳವಾರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜನಪರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮೂರು ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗಿಂತ ಒಳಜಗಳ ಹಾಗೂ ಬಣ ರಾಜಕಾರಣದಲ್ಲಿ ತೊಡಗಿಕೊಂಡಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕಡೆಗಣನೆಯಾಗಿದ್ದು, ಪ್ರಮುಖ ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿಲ್ಲ ಎಂದು ಅವರು ಆರೋಪಿಸಿದರು.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿಯೂ ಹಿಂದುಳಿದ, ಶೋಷಿತ, ಧ್ವನಿದಮನಿತ ಹಾಗೂ ತಬ್ಬಲಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಲ್ಲ. ಇದೇ ರೀತಿ ಮುಂದುವರಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಹಿಂದುಳಿದ ವರ್ಗಗಳಿಗೆ ಅಧಿಕಾರ ಹಾಗೂ ಸಂಪತ್ತಿನಲ್ಲಿ ಸಮಾನ ಪಾಲು ನೀಡಬೇಕು. ಆದರೆ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರೊ. ಗೋವಿಂದರಾವ್ ವರದಿಯನ್ನು ಸಂಪೂರ್ಣ ಜಾರಿಗೊಳಿಸಬೇಕು. ಮಧುಸೂದನ್ ನಾಯ್ಕ್ ಸಮಿತಿಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ವರದಿಯನ್ನೂ ಸಂಪೂರ್ಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಹಾಗೂ ಮಹಾದಾಯಿ ನೀರಾವರಿ ಯೋಜನೆಗಳಿಗೆ ತ್ವರಿತ ಚಾಲನೆ ನೀಡಬೇಕು. ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಉಂಟಾಗದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಮುಂಗಾರು ವೈಫಲ್ಯದಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಲಾಶಯಗಳಲ್ಲಿ ನೀರಿನ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ರೈತರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಎಲ್ಲ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


Previous Post Next Post

Contact Form

f="https://unpkg.com/video.js/dist/video-js.css" rel="stylesheet">