ಕಂಪ್ಲಿಯಲ್ಲಿ ಸ್ವಚ್ಛತಾ ಸೈಕಲ್ ಜಾಥಾ ಮೂಲಕ ಜಾಗೃತಿ
ಕಂಪ್ಲಿ, ಆ. 11: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಂಪ್ಲಿ ಪುರಸಭೆ ವತಿಯಿಂದ "ತ್ಯಾಜ್ಯದಿಂದ ಸ್ವಾತಂತ್ರ್ಯ – ಸ್ವಚ್ಛ ನಗರ, ಆರೋಗ್ಯಕರ ಭಾರತ" ಅಭಿಯಾನದಡಿ ಮದರ್ ತೆರೇಸಾ ಕಾಲೇಜು ಹಾಗೂ ಬಿಎಸ್‌ವಿ ಶಾಲೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಪುರಸಭೆಯ ಮುಖ್ಯಾಧಿಕಾರಿಗಳಾದ ಮಲ್ಲಿಕಾರ್ಜುನ್ ಅವರು ಚಾಲನೆ ನೀಡಿದರು. ಹಿರಿಯ ಆರೋಗ್ಯ ನಿರೀಕ್ಷಕರಾದ ಪ್ರಕಾಶ್, ಜೀವನ್ ಸ್ವಾತಿ, ಪುರಸಭೆ ಸಿಬ್ಬಂದಿ, ಸಮುದಾಯ ಸಂಚಾಲಕರು ಹಾಗೂ ಶಾಲಾ-ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಸಿ ಸ್ವಚ್ಛತೆ ಕುರಿತ ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು, ಪರಿಸರವನ್ನು ಸ್ವಚ್ಛವಾಗಿಡುವುದು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಜನರಿಗೆ ಸಂದೇಶ ನೀಡಲಾಯಿತು.
ಸ್ವಚ್ಛ ನಗರ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಸ್ವಚ್ಛತೆಯನ್ನು ತಮ್ಮ ಜವಾಬ್ದಾರಿಯೆಂದು ಪರಿಗಣಿಸಬೇಕು ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.


