ಕಂಪ್ಲಿ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ
ಬಳ್ಳಾರಿ, ಸೆ. 11: ಪ್ರಸಕ್ತ ವರ್ಷದ ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಸೂಕ್ಷ್ಮ ಗ್ರಾಮಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಕಂಪ್ಲಿ ಪೊಲೀಸ್ ಠಾಣಾ ಸರಹದ್ದಿನ ನಂ.15 ಗೋನಾಳ ಹಾಗೂ ನಂ.10 ಮುದ್ದಾಪುರ ಗ್ರಾಮಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಗ್ರಾಮಗಳಲ್ಲಿ ಪ್ರಕ್ಷುಬ್ಧ ವಾತಾವರಣವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿ ಸಲ್ಲಿಸಿದ್ದರು.
ಪೊಲೀಸ್ ಇಲಾಖೆಯ ಮನವಿಯ ಮೇರೆಗೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ಮೇಲ್ಕಂಡ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಲ್ಲದೆ, ಹಬ್ಬದ ನೆಪದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೂ ಅವಕಾಶ ಇರುವುದಿಲ್ಲ. ನಿಷೇಧಿತ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ಜನಸಂದಣಿ ಸೇರುವುದನ್ನು ಸಹ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
